ವಿಜಯಪುರ: ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಅವರು ಆಗಮಿಸುತ್ತಾರೋ, ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದರು.
ಜ.2ರಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಲಿದ್ದಾರೆ. ಡಿಸೆಂಬರ್ 21 ರಿಂದ ಡಿಸೆಂಬರ್ 31ರ ವರೆಗೆ ವಿಶೇಷ ಗೋಷ್ಠಿಗಳನ್ನು ಆಯೋಜನೆ ಮಾಡಲಾಗುವುದು. ವಿವಿಧ ವಿಚಾರ ಗೋಷ್ಠಿಗಳಲ್ಲಿ ಸಚಿವರುಗಳು ಭಾಗಿಯಾಗಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸ್ಪೀಕರ್ ಯು ಟಿ ಖಾದರ್ ಸೇರಿದಂತೆ ಹಲವು ಸಚಿವರು ಭಾಗಿಯಾಗುತ್ತಾರೆ. ಪಕ್ಷಾತೀತವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಕೇಂದ್ರ ಸಚಿವರುಗಳಿಗೆ ಆಹ್ವಾನ ನೀಡಲಾಗಿದೆ. ಶ್ರೀಸಿದ್ದೇಶ್ವರ ಶ್ರೀಗಳ ಆಶಯಕ್ಕೆ ಧಕ್ಕೆಯಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.