ನವದೆಹಲಿ: ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಮಂಗಳವಾರ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಆದರೆ, ವರಿಷ್ಠ ನಾಯಕ ಖರ್ಗೆ, ಮೊದಲು ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯವಾಗಿದೆ. ಉಳಿದೆಲ್ಲವನ್ನೂ ನಂತರ ನಿರ್ಧರಿಸಬಹುದು ಎಂದು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆ ಜರುಗಿದ್ದು. 28 ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದರು. ಈ ವೇಳೆ, ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಹೆಸರನ್ನು ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಆದರೆ, ಈ ಕುರಿತು ಅಂತಿಮ ಯಾವುದೇ ನಿರ್ಧಾರವಾಗಿಲ್ಲ ಎಂದು ಮೂಲಗಳು ಹೇಳಿವೆ.