ಚಿಕ್ಕೋಡಿ- ನಿಪ್ಪಾಣಿ ನಗರಸಭೆ ಕಾರ್ಯಾಲಯದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಭಾರತೀಯ ಜನತಾ ಪಕ್ಷದ ಜಯವಂತ ಬಾಟಲೆ ಹಾಗೂ ಉಪಾಧ್ಯಕ್ಷರಾದ ನೀತಾ ಬಾಗಡಿ ಅವರ ಪದಗ್ರಹಣ ಸಮಾರಂಭ ನಡೆಯಿತು.
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಭಾಗವಹಿಸಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.
ಬಳಿಕ ಮಹಾಲಕ್ಷ್ಮೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಗಜ್ಯೋತಿ ಬಸವಣ್ಣ, ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ನಗರಸಭೆ ಅನ್ನುವುದು ಪ್ರಜೆಗಳ ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಂರ್ಪಕದ ಕೊಂಡಿಯಾಗಿದೆ. ಪ್ರಜೆಗಳ ಪ್ರತಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು ಚುನಾಯಿತ ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಮೊದಲ ಬಾರಿಗೆ ಬಿಜೆಪಿ ಮಡಿಲಿಗೆ ನಿಪ್ಪಾಣಿ ನಗರಸಭೆ ಬಂದಿದೆ. ಹೀಗಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ನಾಯಕರು ಜನಪರ ಕಾರ್ಯಕ್ರಮಗಳನ್ನು ಕೈಗೊಂಡು, ಅಭಿವೃದ್ಧಿಯ ಪಥದತ್ತ ಹೆಜ್ಜೆ ಹಾಕಬೇಕು ಎಂದು ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧಿಕಾರಿಗಳು, ಗಣ್ಯರು, ಜನಪ್ರತಿನಿಧಿಗಳು, ನಗರಸಭೆ ಸೇವಕ ಸೇವಕಿಯರು,ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.