ಬೆಂಗಳೂರು/ನವದೆಹಲಿ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ.
ಆ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಮಾಜಿ ಸಿಎಂ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಸಂಸತ್ ಭವನದ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೂಡಿ ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಒಂದು ಕ್ಷೇತ್ರ ಹೆಚ್ಚು ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು. ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಮಾಡುತ್ತೇನೆ. ಜನವರಿ ಅಂತ್ಯದೊಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ ಎಂಬ ಪ್ರಶ್ನೆಗೆ, ನಾವು ಎಷ್ಟು ಕಡೆ ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ಕ್ಷೇತ್ರಗಳನ್ನು ಕೇಳುತ್ತೇವೆ. ಈ ಬಗ್ಗೆ ನಮ್ಮಲ್ಲಿ ರಿಪೋರ್ಟ್ ಇದೆ. ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಇಲ್ಲಿ ಸೀಟು ಹಂಚಿಕೆ ಒಂದೇ ಪ್ರಮುಖ ವಿಷಯ ಅಲ್ಲ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಹಾಗು ಹೆಚ್.ಡಿ.ಕುಮಾರಸ್ವಾಮಿಲೋಕಸಭೆ ಚುನಾವಣೆಗೆ ನಿಲ್ಲಲ್ಲ: ಇದೇ ಸಂದರ್ಭದಲ್ಲಿ,ತಮ್ಮ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿಗಳು ಬರುತ್ತಿವೆ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕರ ಅಭಿಪ್ರಾಯ. ನನ್ನ ಅಭಿಪ್ರಾಯವೂ ಅದೇ ಆಗಿದೆ ಎಂದು ಹೇಳಿದರು.
ಕುಮಾರಸ್ವಾಮಿ ಕೇಂದ್ರ ಸಚಿವರಾಗ್ತಾರಾ ಎನ್ನುವ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ಯಾರ ಹಣೆಯ ಮೇಲೆ ಏನು ಬರೆದಿದೆಯೋ ಗೊತ್ತಿಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ ಎಂದರು.