ಬೆಳಗಾವಿ: ದುರ್ನಡತೆ ಹಾಗೂ ಬೆಳಗಾವಿ ಜಿಲ್ಲಾ ಕಚೇರಿಯ ಅಧಿಕಾರಿಗಳು ಹಾಗೂ ನೌಕರರ ಮೇಲೆ ದೌರ್ಜನ್ಯ ಎಸಗಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಸವರಾಜ ಎ.ಎಂ. ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತು ಗೊಳಿಸಿ ಆದೇಶಿಸಲಾಗಿದೆ.
ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿಎಂ.ಎಸ್. ಈ ಆದೇಶ ಹೊರಡಿಸಿದ್ದು ಅಮಾನತಿಗೊಳಗಾದ ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಪೂರ್ವಾನುನತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಮಾನತು ಶಿಕ್ಷೆಗೆ ಗುರಿಯಾದ ಉಪನಿರ್ದೇಶಕ ಬಸವರಾಜ ಅವರು ಮಾನಸಿಕವಾಗಿ ಬಹಳ ಕಿರುಕುಳ ನೀಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಕಚೇರಿಯ ಬಹುತೇಕ ಸಿಬಂದಿಗಳು ಸಚಿವರಿಗೆ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರುಗಳ ಆಧಾರದ ಮೇಲೆ ಈಗ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.