ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಯಾವ ಫ್ಲೈಟ್ನಲ್ಲಿ ಓಡಾಡುತ್ತಾರೆ..? ಅದು ಐಷಾರಾಮಿ ಫ್ಲೈಟ್ ಅಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು.
ಜಮೀರ್ ಜೊತೆ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತದ್ದು?.
ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಗರಂ ಆದರು.
ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ವೀಡಿಯೋವೊಂದನ್ನು ಜಮೀರ್ ಅಹ್ಮದ್ (Zameer Ahmed Khan) ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದ್ದು, ಈ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ರಾಜ್ಯದಲ್ಲಿ ಬರದ ಸಂಕಷ್ಟಕ್ಕೆ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚು ರೈತರ ಜಮೀನಿನಲ್ಲಿ ಬೆಳೆ ನಷ್ಟ ಆಗಿದೆ. ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಜೆಸಿಬಿಯಲ್ಲಿ ಶಾಲೆ ಮಕ್ಕಳು ಶಾಲೆಗೆ ಹೋಗ್ತಿದ್ದಾರೆ. ಇತ್ತ ಸಿಎಂ, ಸಚಿವರು ಖಾಸಗಿ ಜೆಟ್‌ನಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.