ಬೆಂಗಳೂರು: 2019ರ ಲೋಕಸಭೆ ಚುನಾವಣೆ ವೇಳೆ ಹೈವೋಲ್ಟೆಜ್ ಕದನವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರ ಇದೀಗ 2024ರ ಚುನಾವಣೆ ಮುನ್ನವೇ ರಂಗೇರುವ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಮಂಡ್ಯ ಕ್ಷೇತ್ರ ತಲೆನೋವಾಗುವ ಮುನ್ಸೂಚನೆ ಸಿಕ್ಕಿದೆ. ಇದಕ್ಕೆ ಕಾರಣ ಹಾಲಿ ಸಂಸದೆ ಸುಮಲತಾ ನೀಡಿರುವ ಹೇಳಿಕೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿದರೆ ಮಂಡ್ಯದಿಂದ ಸ್ಪರ್ಧೆ ಮಾಡುವೆ. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಸುಮಲತಾ ತಿಳಿಸಿದ್ದಾರೆ. ನನ್ನ ಸ್ಪರ್ಧೆ ಸಂಬಂಧ ಹರಡಿರುವ ವದಂತಿಗಳಿಗೆ ಬೆಂಬಲಿಗರೂ ಸೇರಿ ಯಾರೂ ಕಿವಿಗೊಡಬಾರದು. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆನ್ನುವುದು ನನ್ನ ಬಯಕೆ. ಈ ಬಗ್ಗೆ ಮಾರ್ಚ್ ನಂತರ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಸುಮಲತಾ ಅವರ ಹೇಳಿಕೆ ಮಂಡ್ಯ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಹೇಳಿಕೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ತಾವೂ ಸಹ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆಗಳು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪ್ರಕ್ರಿಯೆಗೆ ಪ್ರಾರಂಭದಲ್ಲೇ ತೊಡಕು ಎದುರಾಗಿದೆ.