ಇಡೀ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಎಲ್ಲಾ ಸಿದ್ಧತೆಗಳು ನಡೆಯುತ್ತಿದ್ದು, ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಳಿದಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಮ್ಮೆ ಹಿಂದೂ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ನಡುವೆ ಜಟಾಪಟಿ ಶುರುವಾಗುವ ಸಾಧ್ಯತೆಗಳು ಹೆಚ್ಚಾಗಿದೆ.
ಹುಬ್ಬಳ್ಳಿಯಲ್ಲಿ 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ರಾಮಮಂದಿರ ಆಂದೋಲನದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಸಮರ ಶುರುವಾಗಿದೆ. ಇದರ ಬೆನ್ನಲ್ಲೇ ಹಿಂದೂ ಕಾರ್ಯಕರ್ತನ ಬಂಧನದಿಂದಾಗಿ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.
ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನದ ಹಿಂದೆ ಯಾವುದೇ ರಾಜಕೀಯ ದ್ವೇಷ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದರೂ, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.