ಬೆಂಗಳೂರು: ಇಂದು ರಾಜ್ಯ ಸರ್ಕಾರದ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಎಂಬ ಹೆಸರಿನ ಜನಸಂಪರ್ಕ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಮಹಾದೇವಪುರ ಮತ್ತು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ನಾಗರಿಕರು ತಮ್ಮ ಕುಂದುಕೊರತೆಗಳನ್ನು ಮುಕ್ತವಾಗಿ ಹಂಚಿಕೊಂಡರು.
ಕೆ.ಆರ್.ಪುರದ ಶಾಸಕ ಬೈರತಿ ಬಸವರಾಜು ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಸುತ್ತಲಿನ ಹಳ್ಳಿಗಳಿಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು ಹಾಗೂ 350 ಕೋಟಿ ರೂ. ವೆಚ್ಚದಲ್ಲಿ ಫ್ಲೈ ಓವರ್ ನಿರ್ಮಿಸಬೇಕು ಎಂದರು. ಮಹಾದೇವಪುರ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಮಾತನಾಡಿ, ನಗರದ ಒಟ್ಟು ಶೇ. 80ರಷ್ಟು ಕಸ ಕ್ಷೇತ್ರದ ಮಿಟಗಾನಹಳ್ಳಿ ಕ್ವಾರಿಗೆ ಬರುತ್ತಿದ್ದು, ಇದು ಅಲ್ಲಿನ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅಷ್ಟೇ ಅಲ್ಲದೇ ರಾಜಕಾಲುವೆಯಲ್ಲಿನ ಹೂಳು ಹಾಗೆಯಿದೆ. ಇದನ್ನು ಸ್ವಚ್ಛಗೊಳಿಸುವ ಕಾರ್ಯ ಮೊದಲು ಶುರುವಾಗಬೇಕು ಎಂದು ತಿಳಿಸಿದರು.