ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ (BJP) ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಹುಬ್ಬಳ್ಳಿಯ (Hubballi) ನಗರ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ (Protest) ನಡೆಸಿದರು.
ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ (R Ashok) ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಈ ವೇಳೆ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ಸಿದ್ಧವಾಗುತ್ತಿರುವಾಗಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ದಶಕಗಳ ಹಳೆಯ ಕೇಸ್‌ಗಳನ್ನು ಕೆದಕಿ ಬಂಧಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಭಜನೆ ಮಾಡುತ್ತ, ಶ್ರೀರಾಮ ದೇವರಿಗೆ ಜೈಕಾರ ಹಾಕುತ್ತ ಪ್ರತಿಭಟನೆ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಪ್ರತಿಭಟನಾ ಸ್ಥಳದಲ್ಲಿ ಆರ್. ಅಶೋಕ್ ಅವರ ಜತೆಗೆ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ಎಂಎಲ್‌ಸಿ ಪ್ರದೀಪ್ ಶೆಟ್ಟರ ಸೇರಿ ಅನೇಕ ನಾಯಕರು ಭಾಗಿಯಾಗಿದ್ದಾರೆ. ಈ ವೇಳೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಪರಿಸ್ಥಿತಿ ಕೈಮೀರಿ ಹೋಗದಂತೆ ನಿಗಾವಹಿಸಿದರು.