ಕಾರವಾರ: ನೌಕಾನೆಲೆಗೆ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಮಳೆಯಿಂದ ಚಾಲಕ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಪಕ್ಕದ ಕಾಲುವೆಗೆ ಬಸ್ (Road Accident) ಇಳಿದಿದೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಸಂಕ್ರುಭಾಗ್ ಘಟ್ಟದಲ್ಲಿ ನಡೆದಿದೆ.
ಅಪಘಾತದಲ್ಲಿ ಚಾಲಕ ಬಡೇಸಾಬ್ ಮುಜಾವರ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನೌಕಾನೆಲೆಗೆ 30ಕ್ಕೂ ಅಧಿಕ ಗುತ್ತಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಳೆಯಿಂದಾಗಿ ತಿರುವಿನಲ್ಲಿ ಬಸ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಹೆದ್ದಾರಿಯಿಂದ ಸ್ಕಿಡ್ ಆಗಿ ರಸ್ತೆಯ ಬಲಭಾಗಕ್ಕೆ ಬಸ್ ಇಳಿದ ಪರಿಣಾಮ ಬಸ್‌ನಲ್ಲಿದ್ದ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕಾರವಾರ ಬಸ್ ಡಿಪೋ ಮ್ಯಾನೇಜರ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳಕ್ಕೆ ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಲುವೆಗೆ ಇಳಿದಿದ್ದ ಬಸ್ ಅನ್ನು ಮೇಲಕ್ಕೆ ಎತ್ತಿದ್ದಾರೆ.ಇನ್ನು ಎರಡು ದಿನಗಳ ಹಿಂದಷ್ಟೇ ಕಾರವಾರದ ಹಬ್ಬುವಾಡದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಎಕ್ಸೆಲ್ ತುಂಡಾದ ಪರಿಣಾಮ 50ಕ್ಕೂ ಅಧಿಕ ಪ್ರಯಾಣಿಕರು ಅಪಾಯಕ್ಕೆ ಸಿಲುಕಿದ್ದರು.