ಬೆಂಗಳೂರು: ನಾನು ಕೇಂದ್ರ ಮಂತ್ರಿ (Union Minister) ಆಗುವ ಬಗ್ಗೆ ಚಿಂತೆ ಮಾಡಿಲ್ಲ. ಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಮಾಧ್ಯಮಗಳ ಜತೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನಾನು ಇವು ಯಾವುದರ ಬಗ್ಗೆಯೂ ಚಿಂತೆ ಮಾಡಿಲ್ಲ. 28 ಕ್ಷೇತ್ರಗಳನ್ನು ಗೆಲ್ಲುವುದಷ್ಟೇ ನಮ್ಮ ಮೈತ್ರಿಕೂಟದ ಗುರಿ. ನನ್ನ ಮುಂದೆ ಇರುವ ಏಕೈಕ ಅಜೆಂಡಾ ಎಂದರೆ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಎಂದು ಹೇಳಿದರು.
ಮಂತ್ರಿಯಾಗಿ ಏನು ಮಾಡಲಿ? ನನಗೆ ಆ ಸುದ್ದಿಯೇ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಈ ಸುದ್ದಿಯನ್ನು ಗಮನಿಸಿದ್ದೇನೆ. ನನಗೆ ಅ ಬಗ್ಗೆ ಆಸೆಯೂ ಇಲ್ಲ. ಅ ರೀತಿ ಚರ್ಚೆಯೇ ಆಗಿಲ್ಲ. ಮುಂದಿನ ಫೆಬ್ರವರಿ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಆದರೆ ಏನು ಮಾಡುವುದು? ಕೇಂದ್ರ ಮಂತ್ರಿ ಆಗುವ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಆಸೆಯೂ ಇಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.