ಬೆಂಗಳೂರು : ನಗರದಲ್ಲಿ ಆಸ್ತಿ ತೆರಿಗೆ(Property Tax) ವಿಚಾರ ಹಾಗೂ ದುಬಾರಿ ದಂಡದ(Fine) ವಿಷಯವಾಗಿ ಸಾಕಷ್ಟು ದೂರುಗಳು ಬಂದಿದ್ದು 30″ x 40″ ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ(DCM) ತಿಳಿಸಿದ್ದಾರೆ.
ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಇಂದು (ಜ.16) ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್ ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟೀಸ್ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. 2020 ರಲ್ಲಿ ಜಾರಿಗೆ ಬಂದ ಆಸ್ತಿ ತೆರಿಗೆ ಕುರಿತ ಕಾಯ್ದೆಯಿಂದಾಗಿ ಜನರಿಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಈಗ ಆ ಕಾನೂನಿಗೆ ತಿದ್ದುಪಡಿ ತರಬೇಕಿದೆ. ಕೆಲ ದಿನಗಳಲ್ಲಿ ಈ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು. ನಮ್ಮ ಸರ್ಕಾರವೇ ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೇ ನಿಮ್ಮ ಸ್ವತ್ತಿನ ದಾಖಲೆಗಳನ್ನು ಉಚಿತವಾಗಿ ತಂದು ಕೊಡುತ್ತೇವೆ ಎಂದು ಭರವಸೆ ನೀಡಿದರು.
ಈಗಾಗಲೇ ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರಬೇಡಿ ಎಂದು ಸೂಚಿಸಲಾಗಿದೆ, ಇಲ್ಲಿಯವರೆಗೆ ಎಷ್ಟು ತೆರಿಗೆ ಕಟ್ಟುತ್ತಿದ್ದಾರೋ ಕಟ್ಟಿಸಿಕೊಳ್ಲಿ, ಒಮ್ಮೆ ಹೆಚ್ಚುವರಿ ಕಟ್ಟಿದ್ದರೆ ಮುಂದಿನ ವರ್ಷಕ್ಕೆ ಸರಿದೂಗಿಸಿಕೊಳ್ಳಲಾಗುವುದು ಎಂದು ಹೇಳಿದರು. ಬೆಂಗಳೂರು ಅಭಿವೃದ್ಧಿಯಾಗಲು ತೆರಿಗೆ ಹಣ ಬೇಕು ಹಾಗಾಗಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲರೂ ಆಸ್ತಿ ತೆರಿಗೆ ವ್ಯಾಪ್ತಿಗೆ ಬರಬೇಕು ಎಂದು ಹೇಳಿದರು.