ಬೆಂಗಳೂರು, : ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam 2024 Date Sheet) ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಸಂಗ್ರಹಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ತೀವ್ರವಾಗಿ ಖಂಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಜತೆಗೆ, ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನೂ ಲಗತ್ತಿಸಿದ್ದಾರೆ.
ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ ಎಸ್ಎಸ್ಎಲ್ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ. ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.