ಬೆಂಗಳೂರು: ‘ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಿರುವಲ್ಲಿ ಸಾಕಷ್ಟು ದೋಷಗಳಿವೆ’ ಎಂದು ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್‌ಗೆ ಅರುಹಿದರು.
‘ನನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪಣೆ ಮತ್ತು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ನ್ಯಾಯ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಸೋಮವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಸುದೀರ್ಘ ವಾದ ಮಂಡಿಸಿ, ‘ಪ್ರಾಸಿಕ್ಯೂಷನ್ ಸಂಗ್ರಹಿಸಿರುವ ಸಾಕ್ಷ್ಯಗಳಲ್ಲಿ ಭಾರತೀಯ ದಂಡ ಸಂಹಿತೆ ಕಲಂ 201ರ (ಅಪರಾಧ ಪುರಾವೆ ಕಣ್ಮರೆಯಾಗುವಂತೆ ಮಾಡುವುದು ಅಥವಾ ಅಪರಾಧ ತೆರೆಯಲು ತಪ್ಪು ಮಾಹಿತಿ ನೀಡುವುದು) ಅನುಸಾರ ಕೊಲೆಗೆ ಬಳಸಲಾಗಿದೆ ಎಂಬ ಆಯುಧವನ್ನೇ ವಶಪಡಿಸಿಕೊಂಡಿಲ್ಲ. ಅಪರಾಧ ನಡೆದಿದ್ದ ಸ್ಥಳದಲ್ಲಿ ರಕ್ತದ ಕಲೆ, ಚಪ್ಪಲಿ, ಮೆಣಸಿನ ಪುಡಿ, ಚಾಪೆ, ಒಂದು ಸ್ಯಾಮ್‌ಸಂಗ್ ಫೋನ್ ಅನ್ನು ಮಹಜರು ಮಾಡಲಾಗಿದೆಯೇ ಹೊರತಾಗಿ ಬೇರಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ಧ ವಿಚಾರಣಾ ನ್ಯಾಯಾಲಯ ದೋಷಾರೋಪ ಹೊರಿಸಿರುವ ಕ್ರಮ ನ್ಯಾಯಬದ್ಧವಾಗಿಲ್ಲ’ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ದೀಕ್ಷಿತ್ ಅವರು, ‘ಅಪರಾಧಿಕ ಪ್ರಕರಣಗಳಲ್ಲಿ ಸಾಂದರ್ಭಿಕ ಪುರಾವೆಗಳಿಂದಲೂ ಕೇಸನ್ನು ತೀರ್ಮಾನಿಸಬಹುದಲ್ಲವೇ?, ಜನಪ್ರತಿನಿಧಿಗಳ ವಿರುದ್ಧದ ಅಪರಾಧಿಕ ಪ್ರಕರಣಗಳು ಗಂಭೀರ ಎಂಬ ಕಾರಣಕ್ಕಾಗಿಯೇ, ಸುಪ್ರೀಂ ಕೋರ್ಟ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವನ್ನು ನಿಯೋಜಿಸಿದೆ. ಇಂತಹ ಪ್ರಕರಣಗಳಲ್ಲಿ ಮೆರಿಟ್ ಮೇಲಿನ ವಾದ ಆಲಿಸುವುದರಿಂದ ಉಳಿದ ಆರೋಪಿಗಳ ವಿರುದ್ಧದ ವಿಚಾರಣೆ ವಿಳಂಬವಾಗುತ್ತದೆ ಅಲ್ಲವೇ?’ ಎಂದು ಕಾಳಜಿ ವ್ಯಕ್ತಪಡಿಸಿದರು.