ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಅಶೋಕ್ ಚವಾಣ್ (Ashok Chavan) ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಅಶೋಕ್ ಚವಾಣ್ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಕಡಿದುಕೊಂಡು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.
ಬುಧವಾರ ಮಹಾರಾಷ್ಟ್ರದಿಂದ ಪಕ್ಷದ ರಾಜ್ಯಸಭಾ ನಾಮನಿರ್ದೇಶಿತರಾಗಿ ತಮ್ಮ ಹೆಸರನ್ನು ಘೋಷಿಸಿದ ನಂತರ ಚವಾಣ್ ಬಿಜೆಪಿಯ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.
ರಾಜ್ಯಸಭಾಗೆ ನಾಮನಿರ್ದೇಶಿತರಾದ ಬಳಿಕ ಮಾತನಾಡಿದ ಚವಾಣ್, ನನ್ನ ಭಾವನೆಗಳನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನಾನು ನಿನ್ನೆಯಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರೂ ಬಿಜೆಪಿ ನನ್ನ ಮೇಲೆ ನಂಬಿಕೆ ಇಟ್ಟಿದೆ. ಇದು ಪಕ್ಷದಿಂದ ನನಗೆ ದೊಡ್ಡ ಜವಾಬ್ದಾರಿಯಾಗಿದೆ ಎಂದು ಹೇಳಿದ್ದರು. ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಬವಾಂಕುಲೆ ಅವರಿಗೆ ಧನ್ಯವಾದ ಅರ್ಪಿಸಿದರು.
ನಾಲ್ಕು ದಶಕಗಳ ಕಾಲ ಕಾಂಗ್ರೆಸ್‌ನೊಂದಿಗೆ ಸಂಬಂಧ ಹೊಂದಿದ್ದ ಚವಾಣ್ ಅವರು ಉತ್ತಮ ಅವಕಾಶಗಳಿಗಾಗಿ ಬಿಜೆಪಿಗೆ ಸೇರಿದ್ದಾಗಿ ಹಾಗೂ ಬೇರೆ ಯಾವುದೇ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ತೊರೆಯುವ ನಿರ್ಧಾರದ ಹಿಂದೆ ಪ್ರಚೋದನೆಯಾಗಿದೆ ಎಂಬ ಟೀಕೆಗಳನ್ನು ಅವರು ತಳ್ಳಿಹಾಕಿದ್ದಾರೆ.