ಬೆಂಗಳೂರು,ಫೆ.28- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್‍ನಲ್ಲಿ ಗದ್ದಲ ಕೋಲಾಹಲ ಸೃಷ್ಟಿಸಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿನದ ಕಲಾಪವನ್ನು ಕೈಗೆತ್ತಿಕೊಳ್ಳಲು ಮುಂದಾದರು.
ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟು ಸದನವನ್ನು ಕೆಲ ಮುಂದೂಡಲಾಯಿತು.
ವಿಷಯ ಪ್ರಸ್ತಾಪಿಸಿದ ಕೋಟಾ ಶ್ರೀನಿವಾಸ್ ಪೂಜಾರಿ, ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಪರ ವಿಧಾನಸೌಧದ ಆವರಣದಲ್ಲೇ ಘೋಷಣೆ ಕೂಗಿದ್ದಾರೆ. ಇದು ಎಲ್ಲರಿಗೂ ಆತಂಕ ಸೃಷ್ಟಿಸಿದೆ. ಇಂದು ಪಾಕಿಸ್ತಾನ ಜಿಂದಾಬದ್ ಎಂಬುವರು ನಾಳೆ ವಿಧಾನಸೌಧಕ್ಕೆ ಬಾಂಬ್ ಇಡುವುದಿಲ್ಲ ಎಂಬುದಕ್ಕೆ ಖಾತರಿ ಏನು? ಎಂದು ಪ್ರಶ್ನಿಸಿದರು. ಸರ್ಕಾರ ಕೇವಲ ಸುಮೊಟೊ ಪ್ರಕರಣ ದಾಖಲಿಸಿದರೆ ಸಾಲದು. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು.
ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇವಲ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದರೆ ಇದೊಂದು ಬೇಜಾವಬ್ದಾರಿ ಸರ್ಕಾರ. ತಕ್ಷಣವೇ ಸದನಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಬೇಕೆಂದು ಒತ್ತಾಯಿಸಿದರು.