ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಪ್ರೀಮಿಯರ್ ಲೀಗ್ನ 8ನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವು ಬೆಂಗಾಲ್ ಟೈಗರ್ಸ್ಅನ್ನು ಮಣಿಸುವ ಮೂಲಕ ಗೆಲುವಿನ ನಗೆ ಬೀರಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ ಡಾರ್ಲಿಂಗ್ ಕೃಷ್ಣ (72 ರನ್, 33 ಎಸೆತ) ಅರ್ಧಶತಕದ ನೆರವಿನೊಂದಿಗೆ ಮೊದಲ ಇನ್ನಿಂಗ್ಸ್ನ 10 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 117ರನ್ ಗಳಿಸಿತ್ತು.
ಮೊದಲ ಇನ್ನಿಂಗ್ಸ್ನಲ್ಲಿ 118 ರನ್ಗಳ ಗುರಿ ಬೆನ್ನಟ್ಟಿದ ಬೆಂಗಾಲ್ ಟೈಗರ್ಸ್ ತಂಡ ಮೊದಲ 10 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 109 ರನ್ ಪೇರಿಸಿತು.
8 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಮತ್ತೊಮ್ಮೆ ಡಾರ್ಲಿಂಗ್ ಕೃಷ್ಣ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 17 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದ ಡಾರ್ಲಿಂಗ್ ಕೃಷ್ಣ 21 ಎಸೆತಗಳಲ್ಲಿ 54 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಇವರಿಗೆ ಉತ್ತಮ ಸಾಥ್ ನೀಡಿದ ಕರಣ್ (49 ರನ್, 23 ಎಸೆತ) ಎರಡನೇ ಇನ್ನಿಂಗ್ಸ್ನಲ್ಲಿ ಕರ್ನಾಟಕದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ 130 ಎನ್ ಕಲೆಹಾಕುವಲ್ಲಿ ಯಶಸ್ವಿಯಾದರು.
ಎರಡನೇ ಇನ್ನಿಂಗ್ಸ್ನಲ್ಲಿ 139 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಬೆಂಗಾಲ್ ತಂಡಕ್ಕೆ ಇನ್ನಿಲ್ಲದಂತೆ ಕಾಡಿದ ಕರ್ನಾಟಕ ಬೌಲರ್ಗಳು ಎದುರಾಳಿ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು ಅಂತಿಮವಾಗಿ ತಂಡಕ್ಕೆ 30 ರನ್ಗಳ ಜಯ ತಂದುಕೊಡುವಲ್ಲಿ ಯಶಸ್ವಿಯಾದರು. ಈ ಮೂಲಕ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಸತತ ಎರಡನೇ ಜಯವನ್ನು ದಾಖಲಿಸಿದೆ.