ಮಂಗಳೂರು, ಮಾ.12: ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಅಂದರೆ ಗುಡಿಸುತ್ತೇವೆ. ಒರೆಸು ಅಂದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ ಎಂದು ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ನಳಿನ್ ರಿಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿಯಾದರೂ ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಬಿಜೆಪಿ ಮತ್ತೆ ಗೆಲ್ಲಬೇಕು ಎಂಬುದು ನಮ್ಮ ಗುರಿ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳ ಚರ್ಚೆ ಬಗ್ಗೆ ನಾನು ಹೆಚ್ಚು ತಲೆಕಡಿಸಿಕೊಳ್ಳುವುದಿಲ್ಲ. ನಾವು ಕಾರ್ಯವನ್ನು ನಂಬಿರುವಂಥವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.
ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ. 15 ವರ್ಷ ಕೆಲಸ ಮಾಡಿದ್ದೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು, ಸ್ಪರ್ಧಿಸಿದೆ. ಆ ಬಳಿಕ ರಾಜ್ಯಾಧ್ಯಕ್ಷನೂ ಆದೆ. ಯಾವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ ಎಂದು ನಳಿನ್ ಪ್ರಶ್ನಿಸಿದರು.
ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಕ್ಷ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು ಎಂದು ನಳಿನ್ ಹೇಳಿದರು