ಬೆಳಗಾವಿ : ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಗಳನ್ನು ಪರಿಷ್ಕರಣೆ ಮಾಡಬೇಕು. ವಯಸ್ಕರ ಮತದಾರರ ಪಟ್ಟಿಗಳ ಮಾಹಿತಿ ಸಂಗ್ರಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.
ಚಿಕ್ಕೋಡಿ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಫೆ.20) ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ನಡೆದ ಪೂರ್ವ ಸಿದ್ಧತೆಯ ಸಭೆಯಲ್ಲಿ ಅವರು ಮಾತನಾಡಿದರು.
ಮತಗಟ್ಟೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಒಂದು ವೇಳೆ ದುರಸ್ತಿ ಇದ್ದಲ್ಲಿ ಸರಿಪಡಿಸಿಕೊಳ್ಳಬೇಕು. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ತಿಳಿಸಿದರು.
ಮತಗಟ್ಟೆ ಅಧಿಕಾರಿಗಳಿಗೆ ಪ್ರಾತ್ಯಾಕ್ಷತೆ ತರಬೇತಿ ನೀಡಬೇಕು. ಮತದಾರರು ಹೆಚ್ಚು ಮತದಾನ ಮಾಡುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಲೋಕಸಭೆ ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಎಲ್ಲ ಅಧಿಕಾರಿಗಳು ತಂಡವಾಗಿ ಕೆಲಸ ಮಾಡುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದರು.