ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿವಿಧ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ಮತ್ತು ಖಾಸಗಿ ವಲಯಗಳ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.
ಮಂಗಳವಾರ, ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಅಂಚೆ ಮತಪತ್ರ ವಿತರಣೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆಯು ಪ್ರಜಾಪ್ರಭುತ್ವ ಹಬ್ಬವಿದ್ದಂತೆ. ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯವರೆಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಎಂದು ಸೂಚಿಸಿದರು.
ಚುನಾವಣಾ ಆಯೋಗವು ಅಗತ್ಯ ಸೇವೆಗಳ ಇಲಾಖೆಗಳಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆ ಮತ್ತು ಆಕಾಶವಾಣಿ, ಬಿ.ಎಸ್.ಎನ್.ಎಲ್ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಅಂಚೆ ಮತಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದರು.