ಬೆಳಗಾವಿ : ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತವೆ. ನಿಯಮಾನುಸಾರ ಸರಕಾರವು ನಿಗದಿಪಡಿಸಿದ ಶುಲ್ಕಗಳನ್ನು ಮಾತ್ರ ಪಡೆದುಕೊಂಡು ಪ್ರವೇಶ ಕಲ್ಪಿಸಬೇಕು.
ಒಂದು ವೇಳೆ ಕಾನೂನುಬಾಹಿರವಾಗಿ ಡೊನೇಶನ್ ಪಡೆದರೆ ಆರ್.ಟಿ.ಇ. ಕಾಯ್ದೆ ಪ್ರಕಾರ ಅಂತಹ ಶಾಲೆಗಳ ನೋಂದಣಿಯನ್ನು ರದ್ದುಪಡಿಸಲು ಕ್ರಮ ತೆಗೆದುಕೊಳ್ಳಲಾಗು ವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪಾಲಕರು ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಪ್ರತಿಯೊಂದು ಶಾಲೆಯು ತನ್ನ ಸೂಚನಾ ಫಲಕದಲ್ಲಿ ಪ್ರವೇಶ ಶುಲ್ಕ ಕುರಿತು ಸ್ಪಷ್ಟ ಮಾಹಿತಿಯನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದ್ದಾರೆ.