ಬೆಂಗಳೂರು, ಮೇ 30- ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಂದನಿಂದ ಹತ್ತನೇ ತರಗತಿವರೆಗೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು, ಶೂ ಮತ್ತು ಸಾಕ್ಸ್ ಖರೀದಿಸಲು 121 ಕೋಟಿ ರೂ.
ಬಿಡುಗಡೆ ಮಾಡಲಾಗಿದೆ.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಸುಮಾರು 42.65 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆಗಳನ್ನು ಖರೀದಿಸುವ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ.
ಶೂ ಖರೀದಿಗೆ ಸಂಬಂಧಿಸಿದಂತೆ ಕೆಲವೊಂದು ಷರತ್ತುಗಳನ್ನು ಸುತ್ತೋಲೆಯಲ್ಲಿ ವಿಧಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ ವಿತರಣೆ ಮಾಡುವ ಜವಾಬ್ದಾರಿಯನ್ನು ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ವಹಿಸಲು ಸೂಚಿಸಿದೆ.
ಒಂದು ಜೊತೆ ಕಪ್ಪು ಬಣ್ಣದ ಶೂ, ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ ಗಳನ್ನು ಖರೀದಿಸಿ, ವಿತರಿಸುವುದು, ಸ್ಥಳೀಯ ವಾತಾವರಣಕ್ಕನುಗುಣವಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸುವಂತೆ ನಿರ್ದೇಶನ ನೀಡಲಾಗಿದೆ.
Laxmi News 24×7