ಬೆಂಗಳೂರು, ಜೂನ್ 03: ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಮೈಸೂರು ಜಿಲ್ಲೆಯ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಅವರು ಬಂಧನ ಭೀತಿಯಲ್ಲಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಶುಕ್ರವಾರ ಭವಾನಿ ರೇವಣ್ಣ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಬಳಿಕ ಎಸ್‌ಐಟಿ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸುತ್ತಿದೆ. ಶನಿವಾರ ಹೊಳೆನರಸೀಪುರ ನಿವಾಸದಲ್ಲಿ ಸಂಜೆಯ ತನಕ ಕಾದರೂ ಸಹ ಭವಾನಿ ರೇವಣ್ಣ ವಿಚಾರಣೆಗೆ ಆಗಮಿಸಿಲ್ಲ.
ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಶನಿವಾರ ಅರ್ಜಿ ಸಲ್ಲಿಸಿದ್ದಾರೆ. ಇದೇ ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ಎಚ್. ಡಿ. ರೇವಣ್ಣ ಬಂಧಿಸಿತ್ತು, ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
4 ತಂಡಗಳು ರಚನೆ: ಭವಾನಿ ರೇವಣ್ಣ ಬಂಧನಕ್ಕಾಗಿಯೇ ಎಸ್‌ಐಟಿ 4 ವಿಶೇಷ ತಂಡಗಳನ್ನು ರಚನೆ ಮಾಡಿದೆ. ಮತ್ತೊಂದು ಕಡೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ವಶದಲ್ಲಿದ್ದು, ಅವರ ವಿಚಾರಣೆ ಸಹ ನಡೆಯುತ್ತಿದೆ.