ವಿಜಯಪುರ, ಜೂನ್ 08: ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮೊದಲೇ ಉತ್ತಮ ಮಳೆಯಾಗುತ್ತಿದ್ದು, ನದಿ ಹಳ್ಳ ಕೊಳ್ಳಗಳ ನೀರಿನ ಮಟ್ಟ ಹೆಚ್ಚಾಗುತ್ತಿದೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಇದರಿಂದಾಗಿ ರೈತರು ಸಂತಸಗೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಶುಕ್ರವಾರದಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ.