ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
ಪತ್ರಿಕಾಗೋಷ್ಠಿ ನಡೆಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೆತ್, ‘ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ನೀಚ ಕೃತ್ಯಗಳಲ್ಲಿ ತೊಡಗಿಕೊಂಡಿದ್ದಾರೆ.
ಪಂಚತಾರಾ ಹೋಟೆಲ್‌ಗಳಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲಿಯೂ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಅವರ ಸಂಬಂಧಿ ಆರ್‌ಎಸ್‌ಎಸ್‌ನ ಶಾಂತನು ಸಿನ್ಹಾ ಆರೋಪಿಸಿದ್ದಾರೆ’ ಎಂದು ಹೇಳಿದ್ದಾರೆ.
ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿ 24 ಗಂಟೆ ಕಳೆಯುವುದರೊಳಗೆ, ಬಿಜೆಪಿಯ ಗಣ್ಯ ಹಾಗೂ ಐಟಿ ವಿಭಾಗದ ಮುಖ್ಯಸ್ಥರ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಪಕ್ಷದ ಪ್ರಭಾವಿ ಸ್ಥಾನದಲ್ಲಿರುವ ಮಾಳವೀಯ ಅವರನ್ನು ಕೂಡಲೇ ಕಿತ್ತುಹಾಕಬೇಕೆಂದು ಒತ್ತಾಯಿಸುತ್ತೇವೆ’ ಎಂದು ಅವರು ಆಗ್ರಹಿಸಿದ್ದಾರೆ.
ಮಾಳವೀಯ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಯಬೇಕು ಎಂದೂ ಸುಪ್ರಿಯಾ ಒತ್ತಾಯಿಸಿದ್ದಾರೆ.