ಬೆಂಗಳೂರು: ಅಂಗನವಾಡಿ ಕೇಂದ್ರದಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಸಾವಿರಾರು ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ.
ರಾಜ್ಯದ ವಿವಿಧ ಮೂಲೆಗಳಿಂದ ಫ್ರೀಡಂ ಪಾರ್ಕ್‌ಗೆ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿ ನಿಮ್ಮ ಪರವಾಗಿ ನಾವಿದ್ದೇವೆ ಎನ್ನುವ ಭರವಸೆ ನೀಡಿದರು. ಇತ್ತ ಪ್ರತಿಭಟನಾ ನಿರತರು ಬೇಡಿಕೆ ಈಡೇರುವವರೆಗೂ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು. ಬುಧವಾರ ರಾತ್ರಿಯಿಡೀ ಫ್ರೀಡಂಪಾರ್ಕ್‌ನಲ್ಲೇ ಕಳೆದ ಅಂಗನವಾಡಿ ನೌಕರರು ತಮ್ಮ ಬ್ಯಾಗ್ ಅನ್ನೇ ತಲೆದಿಂಬು ಮಾಡಿಕೊಂಡು ಚಳಿ, ಗಾಳಿ ಎನ್ನದೇ ರಾತ್ರಿ ಕಳೆದರು.
ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಬದ್ಧ: ಸಚಿವೆ
ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ನನ್ನ ಸಮ್ಮತಿಯಿಲ್ಲ. ಕಳೆದ 48 ವರ್ಷಗಳಲ್ಲಿ ಈವರೆಗೂ ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಒಂದು ಮಗುವೂ ಅನಾರೋಗ್ಯದಿಂದ ಬಳಲಿ ಅಥವಾ ಸಾವನ್ನಪ್ಪಿರುವ ಘಟನೆಗಳು ನಡೆದಿಲ್ಲ. ಅಂಗನವಾಡಿ ಕಾರ್ಯಕರ್ತರ ಕಾರ್ಯವೈಖರಿ ಇಡೀ ದೇಶಕ್ಕೆ ಮಾದರಿ ಎಂದರು.