ಬೆಂಗಳೂರು : ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದ್ದು ತಡರಾತ್ರಿಯವರೆಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಎಸ್‌ಎಸ್‌ಎಲ್ ಸಿ ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಭಾರೀ ಕುಸಿತ ಕಂಡಿರುವ ಬಗ್ಗೆ ಸಿದ್ದರಾಮಯ್ಯ ಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದು ಈ ಬಾರಿ ನಕಲು ಮಾಡುವುದನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ ಎಂದು ಶಿಕ್ಷಣ ಸಚಿವರ ಸಮ್ಮುಖದಲ್ಲೇ ಅಧಿಕಾರಿಗಳಿಗೆ “ಕ್ಲಾಸ್’ ತೆಗೆದುಕೊಂಡಿದ್ದಾರೆ.
ಡಿಸಿ, ಸಿಇಓ ಹಾಗೂ ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಿ. ಡಿಡಿಪಿಐ, ಡಿಸಿ, ಸಿಇಓಗಳು ಒಟ್ಟಿಗೇ ಕುಳಿತು ಚರ್ಚಿಸಿ ಶಿಕ್ಷಣ ಇಲಾಖೆಯ ಪರಿಸ್ಥಿತಿ ಸುಧಾರಿಸಿ. ವಿದ್ಯಾರ್ಥಿಗಳ ಜೀವನದ ಜತೆ ಚೆಲ್ಲಾಟವಾಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಕೈಮೀರಿ ಹೋಗಿರುವ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.