ಗೋಕಾಕ: ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಸಹಿಸಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು.
ಇಲ್ಲಿನ ನಗರಸಭೆ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಹಾಗೂ ಗೋಕಾಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ವೈದ್ಯರು ಮತ್ತು ದಾದಿಯರು ರಾತ್ರಿ ವೇಳೆ ಆಸ್ಪತ್ರೆಗೆ ಬಂದ ರೋಗಿಗಳೊಂದಿಗೆ ಸಭ್ಯತೆಯಿಂದ ವರ್ತಿಸುತ್ತಿಲ್ಲ. ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಿ ಅವರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಆದಷ್ಟು ಬೇಗ ಅಂತಹ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ರಾತ್ರಿ ವೇಳೆಯಲ್ಲಿ ಆಸ್ಪತ್ರೆಗೆ ಬಂದ ರೋಗಿಗಳನ್ನು ಹೊರಗಡೆ ಕಳುಹಿಸಬಾರದು. ಚಿಕ್ಕಮಕ್ಕಳ ತಜ್ಞರೂ ಮುತುವರ್ಜಿಯಿಂದ ಕೆಲಸ ಮಾಡಬೇಕು. ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಇದು ನನ್ನ ಕೊನೆ ಎಚ್ಚರಿಕೆ. ಮತ್ತೆ ಹಾಗೆ ಆದಲ್ಲಿ ನಿಮಗೆ ಗೋಕಾಕದಲ್ಲಿ ಜಾಗ ಇಲ್ಲ’ ಎಂದು ಎಚ್ಚರಿಕೆ ನೀಡಿದರು.