ಬೆಳಗಾವಿ: ‘ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ- ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.
ನಗರದಲ್ಲಿ ಶನಿವಾರ ನಡೆದ ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು, ಮಧ್ಯವರ್ತಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ಕೆಲವು ದೂರುಗಳು ಬರುತ್ತಿವೆ. ಹಾಗಾಗಿ ಯಾವುದೇ ಮಧ್ಯವರ್ತಿಗಳು ಇಲ್ಲದೇ ಯೋಜನೆಗಳ ಸೌಲಭ್ಯ ಫಲಾನುಭವಿಗೆ ದೊರೆಯುವಂತೆ ಎಲ್ಲ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು’ ಎಂದು ತಿಳಿಸಿದರು.