ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಇದನ್ನು ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟವು ಜುಲೈ 30ರಂದು ಜಂತರ್ ಮಂತರ್‌ನಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ.
‘ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ. ಅಲ್ಲದೆ, ಕೇಜ್ರಿವಾಲ್ ಅವರ ಜೀವನದೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆಟವಾಡುತ್ತಿದ್ದಾರೆ’ ಎಂದು ಪಕ್ಷ ಆರೋಪಿಸಿದೆ.
ಮಾರ್ಚ್ 21ರಂದು ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜುಲೈ 12ರಂದು ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಇದೇ ಹಗರಣದ ಪ್ರತ್ಯೇಕ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಈ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ವಿಸ್ತರಿಸಿದೆ. ಹೀಗಾಗಿ, ಅವರು ಇನ್ನೂ ಜೈಲಿನಲ್ಲಿದ್ದಾರೆ.