ಬೆಂಗಳೂರು: “ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟ ಮಾನ್ಯ ರಾಜ್ಯಪಾಲರಿಗೆ ಸಲಹೆ ನೀಡಲು ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ.
ಶಿವಕುಮಾರ್ ಗುರುವಾರ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ತೀರ್ಮಾನದ ಬಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ವಿಚಾರವಾಗಿ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಬೇರೆ ರಾಜ್ಯಗಳಲ್ಲಿ ನಡೆದಿರುವ ಪ್ರಕರಣ, ಇತರೆ ಪ್ರಕರಣಗಳಲ್ಲಿ ನ್ಯಾಯಾಲಯದ ಮಾರ್ಗದರ್ಶನ ಹಾಗೂ ತೀರ್ಪು, ಇಂತಹ ಪರಿಸ್ಥಿತಿಯಲ್ಲಿ ಬೇರೆ ರಾಜ್ಯಗಳಲ್ಲಿ ಯಾವ ಸರ್ಕಾರಗಳು ಯಾವ ರೀತಿ ನಡೆದುಕೊಂಡಿವೆ ಎಂದು ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.