ಕಲಬುರಗಿ: ಜಿಲ್ಲೆಯಲ್ಲಿರುವ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಹಾಗೂ ಕೆಪಿಆರ್ ಚಿಣಮಗೇರಾ ಸಕ್ಕರೆ ಕಾರ್ಖಾಬೆ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡ ರೈತರ ಕಬ್ಬಿನ ಬಾಕಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ತನಕ ಸಾಗಿತು. ಬಳಿಕ ಪ್ರತಿಭಟನಕಾರರು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣ ಪ್ರವೇಶಿಸಲು ನಿರಾಕರಿಸಿದ ಪ್ರತಿಭಟನಕಾರರು ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ, ಬಳಿಕ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದರು.