ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೆ ಒಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಬೇಕು. ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಿ ಪರಿಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಸಂಪೂರ್ಣ ಹಾನಿಗೀಡಾದ ಮನೆಗಳ ಮಾಹಿತಿ ಲಭ್ಯವಿದೆ. ಅಂಥ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಿಳಂಬ ತೋರಬಾರದು. ಒಂದುವೇಳೆ, ರಾಜೀವ್ ಗಾಂಧಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಲು ತಾಂತ್ರಿಕ ತೊಂದರೆ ಎದುರಾದರೆ, ಅಂತಹ ಮನೆಗಳ ಕುರಿತ ವರದಿ ಸಲ್ಲಿಸಬೇಕು’ ಎಂದು ತಿಳಿಸಿದರು.
‘ಸಮೀಕ್ಷಾ ವರದಿ ಪ್ರಕಾರ, ಯಾವ ವರ್ಗದಡಿ ಮನೆ ಹಾನಿಯಾಗಿದೆ ಎಂದು ನಮೂದಿಸಬೇಕು. ಬೆಳಗಾವಿ ತಾಲ್ಲೂಕಿನಲ್ಲಿ ಹಾನಿಗೀಡಾದ ನಾಲ್ಕು ಮನೆಗಳಿಗೆ ಈಗಾಗಲೇ ಪರಿಹಾರ ಕೊಟ್ಟಿದ್ದೇವೆ. ಉಳಿದ ಸಂತ್ರಸ್ತರಿಗೆ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಪರಿಹಾರ ವಿತರಿಸಲು ಕ್ರಮ ವಹಿಸಬೇಕು’ ಎಂದರು.