ಬೆಳಗಾವಿ: ‘ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ತಕ್ಷಣವೇ ಸ್ಪಂದಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ದೌರ್ಜನ್ಯಕ್ಕೆ ಸಂಬಂಧಿಸಿ ಸವದತ್ತಿ ತಾಲ್ಲೂಕಿನಲ್ಲಿ ಹೆಚ್ಚಿನ ದೂರು ಬಂದಿದ್ದವು. ಹಾಗಾಗಿ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ’ ಎಂದರುಜಿಲ್ಲೆಯಲ್ಲಿ ಕಳೆದೊಂದು ವರ್ಷದಲ್ಲಿ ಮಹಿಳೆಯರ ಕಾಣೆ, ವರದಕ್ಷಿಣೆ ಕಿರುಕುಳ ನೀಡುವುದು ಮತ್ತು ದೌರ್ಜನ್ಯ ಪ್ರಕರಣ ಹೆಚ್ಚಿವೆ.
ಕಳೆದ 6 ತಿಂಗಳಲ್ಲಿ 9 ಮಹಿಳೆಯರ ಕೊಲೆಯಾಗಿವೆ. ಇಂಥ ಪ್ರಕರಣಗಳಲ್ಲಿ ಯಾವ ಕಾರಣಕ್ಕೂ ತನಿಖೆ ವಿಳಂಬವಾಗಬಾರದು. ನೊಂದ ಮಹಿಳೆಯರು ಮತ್ತು ಅವರ ಕುಟುಂಬಸ್ಥರಿಗೆ ನ್ಯಾಯ ಒದಗಿಸಲು ಕ್ರಮ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.