ನವದೆಹಲಿ: ಕೋಲ್ಕತ್ತದ ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿರುವ ಸುಪ್ರೀಂ ಕೋರ್ಟ್, ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಹೇಳಿದೆ.
ಕಾನೂನು ತನ್ನ ಕೆಲಸ ಮಾಡಲಿದೆ ಎಂಬುದನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು ಎಂದು ಸಿಬಿಐ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಪರ ಹಾಜರಿದ್ದ ಕಪಿಲ್ ಸಿಬಲ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.
‘ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಅವರ ಬಗ್ಗೆ ಯಾರಾದರೂ ಏನಾದರು ಟೀಕೆ ಮಾಡಿದರೆ ಅವರ ಬೆರಳಗಳನ್ನು ಕತ್ತರಿಸಲಾಗುತ್ತದೆ ಎಂದು ಪಶ್ಚಿಮ ಬಂಗಾಳದ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ’ ಎಂದು ತುಷಾರ್ ಮೆಹ್ತಾ ನ್ಯಾಯಾಲಯದ ಗಮನ ಸೆಳೆದರು.
ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಗುಂಡು ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ ಎಂಬುವುದನ್ನು ಪ್ರಸ್ತಾಪಿಸುವ ಮೂಲಕ ಕಪಿಲ್ ಸಿಬಲ್ ಕೌಂಟರ್ ನೀಡಿದರು.
ಇದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡ ಪೀಠವು, ‘ಈ ಪರಿಸ್ಥಿತಿಯನ್ನು ರಾಜಕೀಯಕರಣಗೊಳಿಸಬೇಡಿ. ಕಾನೂನು ತನ್ನ ಕೆಲಸ ಮಾಡಲಿದೆ ಎಂಬುದನ್ನು ರಾಜಕೀಯ ಪಕ್ಷಗಳು ಮನಗಾಣಬೇಕಿದೆ. ಕ್ಷಿಪ್ರ ತನಿಖೆ ಬಳಿಕ ಕಾನೂನಿನ ಅನ್ವಯ ಕ್ರಮ ಆಗಲಿದೆ ಎಂಬುದನ್ನು ನಾವು ಖಚಿತಪಡಿಸುತ್ತೇವೆ’ಎಂದು ಪೀಠ ಹೇಳಿದೆ.