ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್?
ಬೆಳಗಾವಿ, ಆಗಸ್ಟ್ 27: ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಫೋಟೋ ವೈರಲ್ ಆಗಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಹೀಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಸದ್ಯದಲ್ಲೇ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಜೈಲಿನ ಡಿಜಿ ಮಾಲಿನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಗಲ್ಲಿಗೇರಿಸುವ ಏಕೈಕ ಜೈಲು ಅಂದರೆ ಬೆಳಗಾವಿ ಹಿಂಡಲಗಾ ಜೈಲು. ಹೀಗಾಗಿ ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗಾ, ಸದಾಶಿವ ಡಾಂಗೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವರು ಸೆರೆವಾಸ ಅನುಭವಿಸಿದ್ದಾರೆ.