ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆ.5 ರಿಂದ 7 ರವರೆಗೆ 3 ದಿನ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಸೆ. 8 ರಂದು ಬೆಂಗಳೂರಿಗೆ ಬರಲು ವಿವಿಧ ರಾಜ್ಯ ಹಾಗೂ ಅಂತಾರಾಜ್ಯ ಗಳಿಂದಲೂ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.
ಯಾವ್ಯಾವ ಜಿಲ್ಲೆಗಳಿಗೆ ಬಸ್ ಸಂಚಾರ: ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಹಾಗೂ ವಾರಾಂತ್ಯ ಭಾನುವಾರ ರಜೆ ಹಿನ್ನೆಲೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್‌ಗಳು ಸೆ. 5ರಂದು ಕೆಂಪೇಗೌಡ ಬಸ್ ನಿಲ್ದಾಣದಿಂದ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಸಂಚರಿಸಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವೀರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿವೆ. ಶಾಂತಿನಗರದ ಬಿಎಂಟಿಸಿ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು ತಿರುಚಿ, ಪಾಲಕ್ಕಾಡ್, ತ್ರಿಶೂಲ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗಲಿದೆ.