ಬೆಳಗಾವಿ: ‘ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ನಾನು ಸಿ.ಎಂ ಸ್ಥಾನದ ಆಕಾಂಕ್ಷಿಯಲ್ಲ’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.
ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ.
ಇನ್ನೂ ನಾಲ್ಕು ವರ್ಷ ಅಧಿಕಾರ ನಡೆಸಬೇಕಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಸಿ.ಎಂ ಬದಲಾವಣೆ ಬಗ್ಗೆ ಮಾತನಾಡುವುದು ತಪ್ಪಾಗುತ್ತದೆ. ಸಿದ್ದರಾಮಯ್ಯ ಬದಲಾವಣೆ ವಿಚಾರ ನನಗೆ ಕಾಣಿಸುತ್ತಿಲ್ಲ. ಮುಖ್ಯಮಂತ್ರಿ ಬದಲಿಸುತ್ತಾರೆ ಎಂದು ಯಾರು ಹೇಳಿದ್ದಾರೆ’ ಎಂದು ಪ್ರಶ್ನಿಸಿದರು.
‘ಸಿ.ಎಂ ಕುರ್ಚಿ ಖಾಲಿ ಇದ್ದಾಗ, ಆ ಸ್ಥಾನಕ್ಕೆ ಕ್ಲೇಮ್ ಮಾಡಬೇಕು. ಈಗ ಆ ಸ್ಥಾನವೇ ಖಾಲಿ ಇಲ್ಲ. ಅನೇಕರು ತಮ್ಮ ಅಭಿಪ್ರಾಯಗಳನ್ನು ಹೇಳುತ್ತಿದ್ದಾರೆ. ನಾನು ಈಗ ಸಿ.ಎಂ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸಚಿವ ಸತೀಶ ಜಾರಕೊಹೊಳಿ ಸ್ಪಷ್ಟವಾಗಿ ಹೇಳಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.