ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಈಗ ಯಾರೂ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬುಧವಾರ ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ನಾಯಕತ್ವ ಬದಲಾದರೆ ಸಿಎಂ ಆಗುವ ರೇಸ್‌ಗೆ ಕಾಂಗ್ರೆಸ್‌ನ ಕೆಲ ನಾಯಕರು ತೆರೆಮರೆಯಲ್ಲಿ ಸಿದ್ಧತೆ ನಡೆಸಿದ್ದು, ಹಲವರು ಬಹಿರಂಗವಾಗಿಯೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾರೂ ಹೇಳಿಲ್ಲ. ಸಿಎಂ ಸ್ಥಾನ ಖಾಲಿ ಇಲ್ಲ. ಹೀಗಿರುವಾಗ ಯಾರಾದರೂ ಸಿಎಂ ಆಗುತ್ತೇನೆ ಎಂದು ಏಕೆ ಹೇಳುತ್ತಾರೆ? ಎಲ್ಲರೂ ಹೇಳುತ್ತಿರುವುದು ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಸಿದ್ದರಾಮಯ್ಯ ಸೂಚಿಸಿದರೆ ಸಿಎಂ ಆಗುತ್ತೇನೆ’ ಎಂದು ಕೆಲ ಮುಖಂಡರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಹುದ್ದೆ ಖಾಲಿ ಇಲ್ಲದಿರುವಾಗ ಯಾರಾದ್ರೂ ಯಾಕೆ ಇಂಥ ಸೂಚನೆ ಕೊಡ್ತಾರೆ’ ಎಂದರು.