ಬೆಂಗಳೂರು, ಸೆಪ್ಟೆಂಬರ್, 12: ನಿಯಮ ಜಾರಿಯಾಗುವ ಮೊದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆದು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಇದಕ್ಕೆ ಆರೋಗ್ಯ ಸಚಿವರಿಂದಲೂ ಮೆಚ್ಚುಗೆ ವ್ಯಕ್ತವಾಗಿದ್ದು, ಈ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಹಾಗಾದೆ ಆ ನಿರ್ಧಾರ ಏನು ಎಂದು ಇಲ್ಲಿ ತಿಳಿಯಿರಿ.
ರಾಜ್ಯದ ಹಲವು ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಅವರು ಮನವಿ ಪತ್ರ ಸಲ್ಲಿಸಿದ್ದರು. ಇದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಪುರುಷೋತ್ತಮ ಪತ್ರಕ್ಕೆ ಉತ್ತರಿಸಿರುವ ಸಚಿವ ದಿನೇಶ್ ಗುಂಡೂರಾವ್ ಅವರು, ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಬೇಕೆಂದು ತಾವು ಮಾಡಿರುವ ಸಲಹೆ ಅತ್ಯಂತ ಮಹತ್ವಪೂರ್ಣ ವಿಷಯ ಎನಿಸಿತು. ನೂರಾರು ವೈದ್ಯರು ತಮ್ಮ ಮಾತುಗಳಿಂದ ಪ್ರೇರಿತರಾಗಿ ಕನ್ನಡದಲ್ಲಿ ಬರೆದ ಔಷಧಿ ಚೀಟಿಗಳನ್ನು ತಮ್ಮಲ್ಲಿ ಹಂಚಿಕೊಂಡಿದ್ದಾರೆ ಎನ್ನುವುದು ಸಹ ನಿಜಕ್ಕೂ ಸಂತಸದ ವಿಚಾರಚಾಗಿದೆ ಎಂದರು.