ಬೆಂಗಳೂರು, ಸೆಪ್ಟೆಂಬರ್ 19: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂದ ಗದ್ದುಗೆ ಗುದ್ದಾಟ ಶುರುವಾಗಿದದ್ದು, ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಅಲ್ಲಾಡುತ್ತಿರುವ ಸಂದರ್ಭದಲ್ಲಿ ಕುರ್ಚಿ ಉಳಿಸಿಕೊಳ್ಳಲು ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎಐಸಿಸಿ) ಅಧ್ಯಕ್ಷರನ್ನು ಓಲೈಸಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಚಿವ ಸಂಪುಟ ಸಭೆಯ ನಾಟಕ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಿಂದ ಕಲಬುರ್ಗಿ ಭಾಗದ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ಈ ಭಾಗಕ್ಕೆ 5 ಸಾವಿರ ಕೋಟಿ ಕೊಡುತ್ತೇವೆ. ಇಲ್ಲಿ ಶಾಲಾ ಕಾಲೇಜು ಮಾಡುತ್ತೇವೆ. 1,100 ಕೋಟಿಯ ಪ್ಯಾಕೇಜ್ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇದರಲ್ಲಿ ಹೊಸದೇನೂ ಇಲ್ಲ ಎಂದು ಟೀಕಿಸಿದರು. ಒಂದು ವರ್ಷದ ಹಿಂದೆ ಕೂಡ ಇದೇ ಮಾತುಗಳನ್ನು ಹೇಳಿದ್ದರು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ ಎಂದು ತಿಳಿಸಿದರು.
ಮನೆಮುರುಕರಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ ಅವರು, ಯಾರಿಗೂ ಹೇಳಲು ಹೋಗದಿರಿ; ಅದು ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹೇಳಿದ್ದಾರೆ. ಎಲ್ಲೂ ಮಾತನಾಡಲು ಹೋಗದಿರಿ ಎಂದು ತಿಳಿಸಿದರು.