ಬೆಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಬಾಧಿತ ಜಿಲ್ಲೆಗಳ ಜನಪ್ರತಿನಿಧಿಗಳ ಜತೆಗೆ ಸರಕಾರ ಗುರುವಾರ ಮಹತ್ವದ ಸಭೆ ನಡೆಸಿತು.
16,114 ಚದರ ಕಿ.ಮೀ. ಪರಿಸರ ಸೂಕ್ಷ್ಮ ಅರಣ್ಯ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿ ಸಮ್ಮತಿಸಬಹುದು.
ಅಲ್ಲದೆ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸರಕಾರ ಈ ಮಾಸಾಂತ್ಯದೊಳಗಾಗಿ (ಸೆ. 27) ತನ್ನ ನಿಲುವನ್ನು ಕೇಂದ್ರಕ್ಕೆ ಸಲ್ಲಿಸಬೇಕಿದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳ ಜನಪ್ರತಿನಿಧಿಗಳ ಜತೆಗೆ ಸರಕಾರ ಸಭೆ ನಡೆಸಿದೆ.
ವಿಶೇಷ ಪ್ಯಾಕೇಜ್
ಸಭೆಯ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಇರುವ 16,114 ಚ.ಕಿ.ಮೀ. ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1,576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದೆಂದು ನಾನು ಸಲಹೆ ನೀಡಿದ್ದೇನೆ. ಆದಾಗಿಯೂ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಿ, ಸಿಎಂ ಸಿದ್ದರಾಮಯ್ಯರ ಅವಗಾಹನೆಗೆ ತಂದು ಒಂದು ಮಧ್ಯಮ ಮಾರ್ಗದಲ್ಲಿ ವಿವಾದ ಬಗೆಹರಿಸಿಕೊಳ್ಳುವ ಪ್ರಯತ್ನ ನಡೆಸೋಣ ಎಂದು ಆಶಯ ವ್ಯಕ್ತಪಡಿಸಿದರು.