ಬೆಂಗಳೂರು,ನ.27- ವೀರಶೈವ ಲಿಂಗಾಯಿತ ಸಮುದಾಯವನ್ನು ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವೇಗಕ್ಕೆ ಕೇಂದ್ರ ಬಿಜೆಪಿ ವರಿಷ್ಠರು ಬ್ರೇಕ್ ಹಾಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೂರವಾಣಿ ಮೂಲಕ ಸಿಎಂ ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸಿ, ಯಾವುದೇ ಕಾರಣಕ್ಕೂ ರಾಷ್ಟ್ರೀಯ ನಾಯಕರ ಜೊತೆ ಚರ್ಚ ಮಾಡದೆ ಇಂತಹ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಕಾರಣ ಲಿಂಗಾಯಿತ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಗೆ ಶಿಫಾರಸ್ಸು ಮಾಡುವ ಪ್ರಸ್ತಾವನೆಯನ್ನು ಸಂಪುಟದ ತೀರ್ಮಾನದಿಂದ ಕೈಬಿಡಲಾಗಿದೆ.
ಇದರಿಂದ ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆಯಾಗಿದೆ. ಪಕ್ಷದ ಅನುಮತಿ ಇಲ್ಲದೆ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಂಡರೆ ನಾವು ಕೈ ಕಟ್ಟಿ ಸುಮ್ಮನೆ ಕೂರುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಹೈಕಮಾಂಡ್ ರವಾನಿಸಿದೆ. ವೀರಶೈವ ಲಿಂಗಾಯಿತ ಸಮುದಾಯವನ್ನು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡುವ ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು.
ಇದಕ್ಕಾಗಿಯೇ ಸಿಎಂ ಅವರು ಪತ್ರಿಕಾಗೋಷ್ಠಿ ಕರೆದು ಈ ಐತಿಹಾಸಿಕ ನಿರ್ಧಾರವನ್ನು ಘೋಷಣೆ ಮಾಡುವ ಸಂಭವವಿತ್ತು. ಆದರೆ ಅಮಿತ್ ಷಾ ಅವರು, ಪಕ್ಷದ ತೀರ್ಮಾನವಿಲ್ಲದೆ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಈ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ. ಹೀಗಾಗಿ ಯಡಿಯೂರಪ್ಪನವರು ನಡೆಸಬೇಕಿದ್ದ ಪತ್ರಿಕಾಗೋಷ್ಠಿ ಕೂಡ ರದ್ದುಗೊಂಡಿದೆ.
ಇತ್ತೀಚೆಗೆ ಕೆಲವು ತೀರ್ಮಾನಗಳನ್ನು ಕೈಗೊಳ್ಳುವಾಗ ಪಕ್ಷದ ಮುಖಂಡರ ಜೊತೆ ಚರ್ಚೆ ಮಾಡದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೀರಿ. ನಿಗಮ ಮಂಡಳಿ ನೇಮಕಾತಿ, ವರ್ಗಾವಣೆ ಸೇರಿದಂತೆ ಯಾವುದೇ ವಿಷಯದಲ್ಲೂ ಪಕ್ಷವನ್ನು ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Laxmi News 24×7