ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು.
ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
‘ಸರ್ಕಾರಿ ಭೂಮಿ ಕಬಳಿಸಿದ್ದ ಒಟ್ಟು 84 ಜನರಿಗೆ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಕೋರ್ಟ್ ಆರಂಭವಾದಾಗಿನಿಂದ ಇಲ್ಲಿವರೆಗೆ 23,646 ಪ್ರಕರಣಗಳು ದಾಖಲಾಗಿವೆ.ಈ ಪೈಕಿ 18,601 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 5037 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ’ ಎಂದು ತಿಳಿಸಿದರು.
‘ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಅವರಿಗೆ ಯಾವ ಗ್ರಾಮದಲ್ಲಿ ಎಷ್ಟು ಸರ್ಕಾರಿ ಭೂಮಿ ಇದೆ ಎಂಬುದು ತಿಳಿದಿರುತ್ತದೆ’ ಎಂದರು.