ಬೆಂಗಳೂರು,ಸೆ.24- ಮುಡಾ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ತಮ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.
ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ.
ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ ಬಿಎನ್‌ಎಸ್‌ಎಸ್ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ ಎಂದು ವಿವರಿಸಿದ್ದಾರೆ.
ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್‌ಎಸ್‌ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್‌ಎಸ್‌ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.