ಅಪಘಾತಗಳ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ
ಬೆಳಗಾವಿ: ‘ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅಪಘಾತ ಸಂಭವಿಸುವ ಸ್ಥಳ ಗುರುತಿಸಿ, ಅಪಘಾತಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಮೂರು ವರ್ಷಗಳಲ್ಲಿ ಆಗಿರುವ ಅಪಘಾತಗಳು, ಅದರಲ್ಲಿ ಮೃತಪಟ್ಟವರ ಸಂಖ್ಯೆ ಮತ್ತು ಅಪಘಾತ ವಲಯಗಳ ಮಾಹಿತಿ ಒಳಗೊಂಡ ಸಮಗ್ರ ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.
‘ನಗರ ವ್ಯಾಪ್ತಿಯಲ್ಲಿ ವಾಹನಗಳ ಅತಿಯಾದ ವೇಗ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಬೆಳಗಾವಿ ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಿದ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಹಾಳಾದ ರಸ್ತೆಯಲ್ಲಿನ ಗುಂಡಿ ಮುಚ್ಚಬೇಕು’ ಎಂದು ಹೇಳಿದರು.