ಬೆಂಗಳೂರು, ಸೆಪ್ಟೆಂಬರ್ 26: ನಮ್ಮ ಸರ್ಕಾರದ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಕೇಳಿದ್ದಾರೆ.