ಬೆಂಗಳೂರು, – ಎರಡೂ ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಮುಗಿಸಲು ಪ್ಲಾನ್ ಮಾಡಿವೆ ಎಂದು ಆರೋಪಿಸಿದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಮರೋಪಾದಿಯಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಹೇಳಿದರು. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿಂದು ಮುಂಬರುವ ಗ್ರಾಪಂ ಚುನಾವಣೆ, ಪಕ್ಷದ ಬಲವರ್ಧನೆ ಕುರಿತ ತಾಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್ ಉಳಿಸಲು ಯುದ್ಧ ಮಾಡಬೇಕಿದೆ. ನಾಲ್ಕು ದಿಕ್ಕಿನಲ್ಲಿ ಪಕ್ಷ ಸಂಘಟನೆಗಾಗಿ ಹೋರಾಟ ಮಾಡಬೇಕಿದೆ. ಕುಟುಂಬ ರಾಜಕಾರಣ ಎಲ್ಲಾ ಪಕ್ಷದಲ್ಲಿ ಇದೆ ಎಂದು ಹೇಳಿದರು.
ಒಂದು ದಿಕ್ಕಿನಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇನ್ನೊಂದು ದಿಕ್ಕಿನಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಹೀಗೆ ಒಂದೊಂದು ದಿಕ್ಕಿನಲ್ಲಿ ಪ್ರವಾಸ ಮಾಡಿ ಪಕ್ಷ ಬಲಪಡಿಸಬೇಕು. ಆಗ ಮಾತ್ರ ಮುಂದಿನ ಚುನಾವಣೆಯಲ್ಲಿ ಕುಮಾರಣ್ಣ ಮುಖ್ಯಮಂತ್ರಿಯಾಗಲು ಸಾಧ್ಯ ಎಂದರು.
ಆಂತರಿಕ ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಪಕ್ಷ ಸಂಘಟನೆ ಮಾಡಬೇಕು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಪಕ್ಷದ 2 ಕಣ್ಣುಗಳಿದ್ದ ಹಾಗೆ, ಇಬ್ಬರೂ ಒಟ್ಟಾಗಿ ಯುದ್ಧಕ್ಕೆ ಹೋದರೆ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸಭಾಪತಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಮಾಡಲಿ ಎಂದರು. ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ವಿಧಾನಸಭೆ ಉಪಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿನ ಸೋಲಿನಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ನಮ್ಮ ದೌರ್ಬಲ್ಯವೇನು ಹೇಗೆ ಸಂಘಟನೆ ಮಾಡಬೇಕು ಎಂಬ ಬಗ್ಗೆ ಸಲಹೆ ಕೋಡಿ ಎಂದು ಮನವಿ ಮಾಡಿದರು
Laxmi News 24×7