ಗದಗ: ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ (Siddaramaiah) ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಸರ್ಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ, ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ ಎಂದರು.